ಶಿವಮೊಗ್ಗ,ಕೇಂದ್ರ ಸರ್ಕಾರ ಡೀಸೆಲ್‍ಗೆ ಅಗತ್ಯಕ್ಕಿಂತ ಹೆಚ್ಚು ಇ-30 ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಿ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವುದು ಸರಿಯಲ್ಲ ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ಡೀಸೆಲ್‍ನೊಂದಿಗೆ ಅಗತ್ಯಕ್ಕಿಂತ ಹೆಚ್ಚು ಡೀಸೆಲ್ ಮಿಶ್ರಣ ಮಾಡುತ್ತಿರುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದೆ. ವಾಹನಗಳು ಚಲಿಸುತ್ತಿರುವಾಗಲೇ ಎಂಜಿನ್ ಸ್ಥಗಿತಗೊಂಡು ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಡೀಸೆಲ್ ಬೆಲೆಗೂ ಎಥೆನಾಲ್ ಬೆಲೆಗೂ ವ್ಯತ್ಯಾಸವಿದ್ದು, ಸಾರ್ವಜನಿಕರಿಂದ ಲೂಟಿ ಮಾಡುವ ಉದ್ದೇಶದಿಂದಲೇ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ವೈಜ್ಞಾನಿಕವಾಗಿ ವರದಿ ಪಡೆದ ನಂತರ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯಕ್ಕೆ ಅಗತ್ಯ ದಾಖಲೆಗಳನ್ನು ಒದಗಿಸಿದೆ. ಕೇಂದ್ರ ಸರ್ಕಾರ ತನ್ನ ತಪ್ಪನ್ನು ಮರೆಮಾಚಿಕೊಳ್ಳಲು ಜನರ ಗಮನ ಬೇರೆಡೆಗೆ ತಿರುಗಿಸುವ ಪ್ರಯತ್ನ ಮಾಡುತ್ತಿದೆ. ಎಥೆನಾಲ್‍ನ ಅತಿಯಾದ ಮಿಶ್ರಣದಿಂದ ಆಗುತ್ತಿರುವ ಅನಾಹುತಗಳಿಗೆ ಹೊಣೆ ಯಾರು ಎಂದು ಪ್ರಶ್ನಿಸಿರುವ ಅವರು, ಕೇಂದ್ರ ಸರ್ಕಾರ ಕೂಡಲೇ ತನ್ನ ತಪ್ಪನ್ನು ಸರಿಪಡಿಸಿಕೊಂಡು ಸರಿಯಾದ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಅಲ್ಲದೇ ಈ ರೀತಿ ಅಕ್ರಮವಾಗಿ ಇ-30 ಮತ್ತು ಅದಕ್ಕೂ ಹೆಚ್ಚು ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿನಯ್ ತಾಂದ್ಲೆ ಎಚ್ಚರಿಸಿದ್ದಾರೆ.
