ಶಿವಮೊಗ್ಗ | ಭಾರತ್ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮ

ಶಿವಮೊಗ್ಗ

ಶಿವಮೊಗ್ಗ,ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜನವರಿ 10 ಮತ್ತು 11ರಂದು ಶಿವಮೊಗ್ಗ ಜಿಲ್ಲಾ ಸಂಸ್ಥೆ ಶತಮಾನೋತ್ಸವ, ಟಿ.ವಿ.ನಾರಾಯಣ ಶಾಸ್ತ್ರಿಗಳ ಜನ್ಮ ಶತಮಾನೋತ್ಸವ ಸ್ಮರಣಾರ್ಥ ಜಿಲ್ಲಾ ಮಟ್ಟದ ಸ್ಕೌಟ್ಸ್-ಗೈಡ್ಸ್ ಮತ್ತು ರೋವರ್ಸ್-ರೇಂಜರ್ಸ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

ಜನವರಿ 10ರಂದು ಸಂಜೆ 4.30ಕ್ಕೆ ಜಿಲ್ಲಾ ಮುಖ್ಯ ಆಯುಕ್ತೆ ಶಕುಂಲತಲಾ ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸುವರು. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪಥ ಸಂಚಲನಕ್ಕೆ ಚಾಲನೆ ನೀಡುವರು. ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಭಾಗವಹಿಸುವರು.

ಸಂಜೆ 6.3೦ಕ್ಕೆ ಶತಮಾನೋತ್ಸವ ಹಾಗೂ ಜಿಲ್ಲಾಮಟ್ಟದ ರ್‍ಯಾಲಿ ಉದ್ಘಾಟನೆಯನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಅಧ್ಯಕ್ಷತೆ ವಹಿಸುವರು. ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ, ಶಾಸಕ ಎಸ್.ಎನ್.ಚನ್ನಬಸಪ್ಪ, ಗೋಪಾಲಕೃಷ್ಣ ಬೇಳೂರು, ಎಂಎಲ್‌ಸಿ ಡಿ.ಎಸ್.ಅರುಣ್ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸುವರು.

ಜನವರಿ 1೦ರ ರಾತ್ರಿ 9ಕ್ಕೆ ಭವ್ಯ ಶಿಬಿರಾಗ್ನಿ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ ನಡೆಸಿಕೊಡುವರು. ಜನವರಿ ೧೧ರ ಬೆಳಗ್ಗೆ ೯.೩೦ಕ್ಕೆ ಕೌಶಲ್ಯ ದರ್ಶನ ಕಾರ್ಯಕ್ರಮವನ್ನು ಎಂಎಲ್‌ಸಿ ಡಾ|| ಧನಂಜಯ ಸರ್ಜಿ ಉದ್ಘಾಟಿಸುವರು.

ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಮತ್ತು ತಹಸೀಲ್ದಾರ್ ಎಸ್.ವಿ.ರಾಜೀವ್ ಪಾಲ್ಗೊಳ್ಳುವರು.ಜನವರಿ 11ರಂದು ಮಧ್ಯಾಹ್ನ 2.3೦ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಅಧ್ಯಕ್ಷತೆ ವಹಿಸುವರು.

ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿರುವರು.

Author