KSRTC ಬಸ್‌ಗೆ ಡಿಕ್ಕಿ ಹೊಡೆದ ಕಾರು ; ಐವರು ಸಾವು

ಬೆಂಗಳೂರು

ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನ ನೆಲಮಂಗಲದ ಜಿಂದಾಲ್‌ ಸಂಸ್ಥೆಯ ಬಳಿ ಶನಿವಾರ (ಫೆ.14) ಮಧ್ಯರಾತ್ರಿ ನಡೆದಿದೆ.

ಮೃತರನ್ನು ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20), ಮತ್ತು ಧನುಷ್ (20) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ದೊಡ್ಡಬಳ್ಳಾಪುರ ನಿವಾಸಿಗಳು ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಟಾಟಾ ಇಂಡಿಕಾ ಕಾರು ತುಮಕೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ನಂತರ ಪಕ್ಷದ ರಸ್ತೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಬಸ್ಸಿನ ಮುಂಭಾಗವೂ ಹಾನಿಗೊಳಗಾಗಿದೆ.

ಆದರೆ, ಬಸ್ಸಿನಲ್ಲಿದ್ದ ಎಲ್ಲಾ 43 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Author