ಸಾಗರ, ಇಲ್ಲಿನ ಎಲ್.ಬಿ. ಮತ್ತು ಎಸ್.ಬಿ.ಎಸ್. ಕಾಲೇಜಿನ ಎದುರು ಬಸ್ ನಿಲ್ದಾಣ ನಿರ್ಮಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಎಲ್.ಬಿ. ಎಂಡ್ ಎಸ್.ಬಿ.ಎಸ್. ಕಾಲೇಜು ಹಾಗೂ ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿದ್ದಾರೆ.
ಬಿ.ಎಡ್.ನಲ್ಲಿ 2೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ಬೇರೆಬೇರೆ ಊರುಗಳಿಂದ ವಿದ್ಯಾರ್ಥಿಗಳು ಬಂದು ಇಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಈ ಹಿಂದೆ ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣವಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಸ್ ನಿಲ್ದಾಣವನ್ನು ಕೆಡವಲಾಗಿದೆ. ಇದರಿಂದ ವಿದ್ಯಾರ್ಥಿಗಳು ಬಿಸಿಲು ಮತ್ತು ಮಳೆಗಾಲದಲ್ಲಿ ಬಸ್‌ಗಾಗಿ ಕಾಯಲು ಸೂಕ್ತ ವ್ಯವಸ್ಥೆ ಇಲ್ಲ. ತಕ್ಷಣ ಎಲ್.ಬಿ.ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಎಬಿವಿಪಿ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಮೋಹನ್ ಎಚ್.ಜಿ., ಸುಜಿತ್ ಡಿ., ಪ್ರಜ್ವಲ್, ನಿತಿನ್ ಕುಮಾರ್ ಇನ್ನಿತರರು ಹಾಜರಿದ್ದರು.



