ದಾವಣಗೆರೆಯಿಂದ ಭದ್ರಾವತಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿರುವ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಇಂದು ಸಂಭವಿಸಿದೆ .
ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಾವಣಗೆರೆಯಿಂದ ಹೊರಟಿದ್ದ ಈ ಬಸ್ ಚನ್ನಗಿರಿ ಮಾರ್ಗವಾಗಿ ಬರುತ್ತಿದ್ದಾಗ ಕಾಗೆಹಳ್ಳದ ಸೇತುವೆ ಬಳಿ ತಲುಪುತ್ತಿದ್ದಂತೆ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಉರುಳಿದೆ .
ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ ಮೂರ್ನಾಲ್ಕು ಜನರಿಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರ ಕಾಲು ಮುರಿದಿದ್ದು, ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.



