ಬಿಹಾರ, ಇಲ್ಲಿನ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಸಂಭವಿಸಿದ್ದು, 8 ಮಂದಿ ಮಹಿಳಾ ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಇಂದಿನ ಧಾರ್ಮಿಕ ಕಾರ್ಯದ ಹಿನ್ನೆಲೆ ದೇಗುಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ತೀವ್ರ ಜನದಟ್ಟಣೆಯಿಂದಾಗಿ ಈ ದುರಂತ ಸಂಭವಿಸಿದೆ. ಅನೇಕರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಮಾಹಿತಿ ಆಧಾರದ ಮೇಲೆ ಪೊಲೀಸರು ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ದೇವಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ವರದಿಯ ಬೆನ್ನಲ್ಲೇ ದೀಪ್‌ನಗರ ಪೊಲೀಸ್ ಠಾಣೆಯ ತಂಡ, ಸದರ್ ಡಿಎಸ್‌ಪಿ ಮತ್ತು ಎಸ್‌ಡಿಎಂ ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.



