ಇವತ್ತು ರಾಜಧಾನಿ ಬೆಂಗಳೂರು ನಗರ, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳ ಒಟ್ಟು 24 ಜಿಲ್ಲೆಗಳಲ್ಲಿ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಎಚ್ಚರಿಕೆ ರವಾನಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಕೊಡಗು, ಮಂಡ್ಯ, ತುಮಕೂರು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ವರ್ಷಧಾರೆಯಾಗಲಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ. ಇದರ ಜೊತೆಗೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರಗಿ, ಬೀದರ್, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ನಿರ್ದಿಷ್ಟ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನುಳಿದಂತೆ ಮುಂದಿನ ಆರು ದಿನಗಳ ಕಾಲ 20 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಂಭವವಿದೆ. ಕೆಲವು ಪ್ರದೇಶಗಳಲ್ಲಿ ಮಳೆಯ ಜೊತೆಗೆ ಗುಡುಗಿನ ಅಬ್ಬರ ಕೂಡ ಇರಲಿದೆ ಎಂದು ಇಲಾಖೆ ತಿಳಿಸಿದೆ.



