ಭದ್ರಾವತಿ,ತಾಲೂಕಿನ ದೊಡ್ಡೇರಿಯ ಶಿವನಿ ರಸ್ತೆಯ ಬದಿಯಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ.ಬೆಳಗ್ಗೆ 5 ಗಂಟೆ ಹೊತ್ತಿಗೆ ಕೆಂಪಮ್ಮ ಎಂಬುವವರು ರಸ್ತೆಯ ಎಡಭಾಗದಲ್ಲಿ ವಾಕಿಂಗ್ ಮಾಡುತ್ತಿದ್ದರು.
ಈ ವೇಳೆ ಹಿಂದಿನಿಂದ ಬಂದ ಬೈಕ್ ಚಾಲಕ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಮಹಿಳೆ ರಸ್ತೆಗೆ ಬಿದ್ದಿದ್ದು, ಬಲಗಾಲಿನ ಮೊಣಕಾಲಿನ ಕೆಳಗೆ ಮೂಳೆ ಮುರಿತವಾಗಿದೆ. ಅಲ್ಲದೆ ತಲೆ ಹಾಗೂ ದೇಹದ ಇತರ ಭಾಗಗಳಿಗೂ ಒಳಪೆಟ್ಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಪಘಾತದ ಬಳಿಕ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





