ಸಾಗರ | ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗದಂತೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು : ಪಿಎಸ್‌ಐ ಪ್ರವೀಣ್ ಕರೆ

ಶಿವಮೊಗ್ಗ

ಸಾಗರ ತಾಲೂಕಿನ ಆನಂದಪುರ ಇಲ್ಲಿ,ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಯೂ ವಂಚಿತರಾಗದಂತೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕರೆ ನೀಡಿದರು.

ಅವರು ದಾಸಕೊಪ್ಪದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

ಶಿಕ್ಷಣವು ವ್ಯಕ್ತಿಯ ಬದುಕನ್ನು ಬದಲಾಯಿಸುವ ಅತ್ಯಂತ ಶಕ್ತಿಯುತ ಸಾಧನವಾಗಿದೆ. ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಆತ್ಮವಿಶ್ವಾಸ ಹಾಗೂ ಶಿಸ್ತಿನಿಂದ ಉನ್ನತ ಗುರಿಗಳನ್ನು ಸಾಧಿಸಬಹುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಯವನ್ನು ಸದುಪಯೋಗಪಡಿಸಿಕೊಂಡು ಪಠ್ಯ ಚಟುವಟಿಕೆಗಳ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.

ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಸಮಯ ಕಳೆಯುವುದನ್ನು ತಪ್ಪಿಸಿ, ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಪೋಷಕರು ಹಾಗೂ ಶಿಕ್ಷಕರ ಸಲಹೆ-ಸೂಚನೆಗಳನ್ನು ಗೌರವಿಸಿ, ಸಮಾಜಕ್ಕೆ ಮಾದರಿಯಾಗುವ ನಾಗರಿಕರಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೆಲ ಮಕ್ಕಳು ಶಾಲೆಯಿಂದ ದೂರ ಉಳಿದು ದುಶ್ಚಟಗಳಿಗೆ ಬಲಿಯಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗುವ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಪಿಎಸ್‌ಐ ಪ್ರವೀಣ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪಾಂಡುರಂಗ ಯುವಕ ಸಂಘದ ಅಧ್ಯಕ್ಷ ನಾಗರಾಜ್ ಮಾತನಾಡಿ, ಶಿಕ್ಷಣದ ಮಹತ್ವ ಅರಿತು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸದಾ ಕಾಳಜಿ ವಹಿಸುತ್ತಿರುವ ಪಿಎಸ್‌ಐ ಪ್ರವೀಣ್ ಅವರ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಉತ್ತೇಜನ ನೀಡಿರುವ ಅವರ ಕಾರ್ಯ ಇತರರಿಗೂ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿದ್ದಾರೂಢ , ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಅಕ್ಷಯ್ ,ಪ್ರಮುಖರಾದ ಸುರೇಶ್,ಕೃಷ್ಣಮೂರ್ತಿ, ಸುಬ್ರಮಣ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Author