“ಶಿವಮೊಗ್ಗ ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ಹರೋಹರ ಜಾತ್ರೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ರೀತಿಯ ಮೂಲಸೌಕರ್ಯಗಳ ಕೊರತೆಯಾಗದಂತೆ ಮಹಾನಗರ ಪಾಲಿಕೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದರು.
ಇದೇ ತಿಂಗಳು ವಿಜೃಂಭಣೆಯಿಂದ ನಡೆಯಲಿರುವ ಹರೋಹರ ಜಾತ್ರೋತ್ಸವದ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಇಂದು ಮಾನ್ಯ ಶಾಸಕರು ಜಾತ್ರೆ ನಡೆಯುವ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಮಹತ್ವದ ಪ್ರಗತಿ ಪರಿಶೀಲನೆ ನಡೆಸಿದರು.”ಜಾತ್ರೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳು ಬರಿಗಾಲಿನಲ್ಲಿ ನಡೆದು ತಮ್ಮ ಹರಕೆ ಹಾಗೂ ಸೇವೆಯನ್ನು ಅರ್ಪಿಸುವ ಕಾರಣದಿಂದ, ಜಾತ್ರೆಯ ಆವರಣ ಮತ್ತು ಸುತ್ತಮುತ್ತಲಿನ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು.

ಸಾರ್ವಜನಿಕರ ಹಾಗೂ ಭಕ್ತಾದಿಗಳ ಸುಲಭ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ನಿಗಾ ವಹಿಸಬೇಕು,” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಅಲ್ಲದೇ, “ಜಾತ್ರೋತ್ಸವದ ದಿನಗಳಲ್ಲಿ ಆಗಮಿಸುವ ಸಾವಿರಾರು ಭಕ್ತಾದಿಗಳಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಅಭಾವ ಹಾಗೂ ಬೀದಿ ದೀಪಗಳ ಸಮಸ್ಯೆ ಎದುರಾಗಬಾರದು.
ಅದಕ್ಕಾಗಿ ನಿರಂತರ ಶುದ್ಧ ಕುಡಿಯುವ ನೀರು ಹಾಗೂ ಬೆಳಕಿನ ವ್ಯವಸ್ಥೆಯನ್ನು ಸಜ್ಜಾಗಿಟ್ಟುಕೊಳ್ಳಬೇಕು,” ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ಈ ಸ್ಥಳ ಪರಿಶೀಲನಾ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಮಹಾನಗರ ಪಾಲಿಕೆಯ ಅಧಿಕಾರಿಗಳು, ದೇವಸ್ಥಾನ ಸಮಿತಿಯ ಗೌರವಾನ್ವಿತ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.




