ಶಿವಮೊಗ್ಗ, ಮಲವಗೊಪ್ಪ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿಯಿಂದ ಭೂಮಿ ಹಾಗೂ ಆಸ್ತಿಯನ್ನು ಕಳೆದುಕೊಳ್ಳುತ್ತಿರುವ ಭೂ ಮಾಲೀಕರಿಗೆ ನ್ಯಾಯಯುತ ಮತ್ತು ಸಮರ್ಪಕ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳುವ ಕುರಿತು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ರಸ್ತೆ ಅಗಲೀಕರಣ ಕಾಮಗಾರಿಯ ಪ್ರಗತಿ, ಭೂಸ್ವಾಧೀನ ಪ್ರಕ್ರಿಯೆ ಮತ್ತು ಪರಿಹಾರ ವಿತರಣೆಯ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು, ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದರೂ, ಅದಕ್ಕಾಗಿ ತಮ್ಮ ಜಮೀನು ಹಾಗೂ ಆಸ್ತಿಯನ್ನು ಕಳೆದುಕೊಳ್ಳುತ್ತಿರುವ ಭೂ ಮಾಲೀಕರಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ನಿಯಮಾನುಸಾರ ಪ್ರತಿಯೊಬ್ಬ ಫಲಾನುಭವಿಗೂ ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಮಯೋಚಿತ ಪರಿಹಾರ ದೊರೆಯುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪರಿಹಾರ ವಿತರಣೆಯಲ್ಲಿ ವಿಳಂಬ ಉಂಟಾಗದಂತೆ ದಾಖಲೆಗಳ ಪರಿಶೀಲನೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಸಾರ್ವಜನಿಕರಿಂದ ಬರುವ ಅಹವಾಲುಗಳಿಗೆ ಆದ್ಯತೆ ನೀಡಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸುವಂತೆ ತಿಳಿಸಿದರು.
ಸಭೆಯಲ್ಲಿ ಅಧಿಕಾರಿಗಳು ರಸ್ತೆ ಅಗಲೀಕರಣ ಕಾಮಗಾರಿಯ ಪ್ರಗತಿ ಹಾಗೂ ಭೂಸ್ವಾಧೀನ ಪ್ರಕ್ರಿಯೆಯ ಇತ್ತೀಚಿನ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದರು.
ಸ್ಥಳೀಯ ಜನರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಜಿಲ್ಲಾಡಳಿತ ಮತ್ತು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕಿ ಸೂಚಿಸಿದರು.
ಸಭೆಯಲ್ಲಿ ಎನ್‌ಎಚ್‌ಎಐ, ಜಿಲ್ಲಾಡಳಿತ, ತಾಲೂಕು ಆಡಳಿತ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.





