ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಆಯನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ದಿಢೀರ್ ಭೇಟಿ ನೀಡಿ, ಶಾಲೆಯಲ್ಲಿನ ಶೈಕ್ಷಣಿಕ ಚಟುವಟಿಕೆ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಿದರು.

ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿದ ಸಚಿವರು, ಸರ್ಕಾರ ನೀಡಿದ ಶೂ ಮತ್ತು ಸಾಕ್ಸ್ ಎಲ್ಲರಿಗೂ ದೊರೆತಿದೆಯೇ ಎಂದು ವಿದ್ಯಾರ್ಥಿಗಳನ್ನೇ ಕೇಳಿದರು. ಅಲ್ಲದೆ, ಅವರಿಗೆ ನೀಡಲಾಗಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟ ಪರಿಶೀಲಿಸಿದರು. ʻʻತಮಗೆ ನೀಡಲಾಗಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟ ತೃಪ್ತಿಕರವಾಗಿದೆ. ಪೋಷಕರೂ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆʼʼ ಎಂದು ವಿದ್ಯಾರ್ಥಿಗಳು ಸಚಿವರಿಗೆ ಮಾಹಿತಿ ನೀಡಿದರು.

ಶೂ-ಸಾಕ್ಸ್‌ನ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳಿರುವ ಹಿನ್ನೆಲೆಯಲ್ಲಿ ಸಚಿವರು ಈ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ವಿದ್ಯಾರ್ಥಿನಿಯೋರ್ವಳು ಶೌಚಾಲಯ ವ್ಯವಸ್ಥೆ ಸರಿಪಡಿಸುವಂತೆ ಸಚಿವರಲ್ಲಿ ಮಾನವಿಮಾಡಿಕೊಂಡಿದ್ದು, ಕೂಡಲೇ ಸಚಿವರು ಶಾಲೆಯ ನೈರ್ಮಲ್ಯ, ಶೌಚಾಲಯ ವ್ಯವಸ್ಥೆ, ಬಿಸಿಯೂಟದ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಶಾಲೆಯ ಮೇಲ್ಚಾವಣಿ ದುರಸ್ತಿ ಕಾರ್ಯ ವೀಕ್ಷಿಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.





