ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಕೆರೆಕೈ ಸರ್ಕಾರಿ ಶಾಲೆಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಘಟನಾ ಸ್ಥಳಕ್ಕೆ ಗುರುವಾರ ತಡರಾತ್ರಿ ಭೇಟಿ ನೀಡಿದ ಅವರು, ಶಾಲೆಯ ಮುಖ್ಯ ಶಿಕ್ಷಕರಿಂದ ಘಟನೆ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಬಳಿಕ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಪತ್ತೆಹಚ್ಚುವಂತೆ ಸೂಚಿಸಿದರು.‘ಕರೂರು ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳು ನಡೆಯುತ್ತಿದ್ದು, ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಾಲೆಗೆ ಬೆಂಕಿ ಹಚ್ಚಲು ಯತ್ನಿಸಿರುವ ಪ್ರಕರಣವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು.
ಆರೋಪಿಗಳನ್ನು ಇನ್ನೆರಡು–ಮೂರು ದಿನಗಳಲ್ಲಿ ಪತ್ತೆಹಚ್ಚಬೇಕು’ ಎಂದು ಬೇಳೂರು ಸೂಚಿಸಿದರು.‘ಪ್ರಕರಣದ ಹಿಂದೆ ಇಬ್ಬರು ವ್ಯಕ್ತಿಗಳು ಇರುವ ಸಾಧ್ಯತೆ ಇದೆ. ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಮಾಹಿತಿ, ವಾಹನಗಳ ಸಂಚಾರ ಮತ್ತು ಲಭ್ಯವಿರುವ ಇತರೆ ಸುಳಿವುಗಳನ್ನು ಆಧರಿಸಿ ತನಿಖೆ ನಡೆಸಬೇಕು. ಅಗತ್ಯವಿದ್ದರೆ ಮೊಬೈಲ್ ಕರೆ ಹಾಗೂ ಇತರ ತಾಂತ್ರಿಕ ಮಾಹಿತಿಯನ್ನೂ ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚಬೇಕು’ ಎಂದು ಅವರು ಪೊಲೀಸರಿಗೆ ತಿಳಿಸಿದರು.
ಕರೂರು ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಗಳ ಕಳ್ಳತನದ ಪ್ರಕರಣಗಳೂ ನಡೆದಿವೆ. ಒಂಟಿ ಮನೆಗಳ ನಿವಾಸಿಗಳು ಆತಂಕದಲ್ಲಿದ್ದು, ಕಳ್ಳತನ ಪ್ರಕರಣಗಳಿಗೂ ಆದ್ಯತೆ ನೀಡಿ ತನಿಖೆ ನಡೆಸಬೇಕು ಎಂದು ಸ್ಥಳೀಯರು ಶಾಸಕರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸುವಂತೆ ಶಾಸಕರು ಸಲಹೆ ನೀಡಿದರು. ಆರೋಪಿಗಳ ಕುರಿತು ಖಚಿತ ಮಾಹಿತಿ ನೀಡುವವರಿಗೆ ತಮ್ಮ ವೈಯಕ್ತಿಕವಾಗಿ ₹50 ಸಾವಿರ ಬಹುಮಾನ ನೀಡುವುದಾಗಿ ಬೇಳೂರು ತಿಳಿಸಿದರು. ಈ ಕುರಿತು ಕರಪತ್ರಗಳನ್ನು ಸಿದ್ಧಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸುವಂತೆ ಪೊಲೀಸರಿಗೆ ಸೂಚಿಸಿದರು.
ಶಾಲೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸುವ ಉದ್ದೇಶದಿಂದ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಒತ್ತು ನೀಡಬೇಕು ಎಂದು ಅವರು ಹೇಳಿದರು. ಕೆರೆಕೈ ಶಾಲೆಗೆ ನಾಲ್ಕು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸ್ಥಳೀಯ ದಾನಿಗಳ ಸಹಕಾರದಿಂದ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ಕೈಗೊಳ್ಳಬಹುದು ಎಂದರು.‘ಸಿಸಿ ಕ್ಯಾಮೆರಾಗಳ ಅಳವಡಿಕೆಯಿಂದ ಅಪರಾಧ ಪ್ರಕರಣಗಳ ತನಿಖೆಗೆ ಅಗತ್ಯವಾದ ಸುಳಿವುಗಳು ಲಭ್ಯವಾಗಲಿದ್ದು, ಅಪರಾಧಗಳನ್ನು ತಡೆಯಲೂ ಸಹಕಾರಿಯಾಗಲಿದೆ.
ಸರ್ಕಾರಿ ಶಾಲೆಗಳು ಹಾಗೂ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಸ್ಥಳೀಯರ ಸಹಕಾರದೊಂದಿಗೆ ಭದ್ರತಾ ವ್ಯವಸ್ಥೆ ಬಲಪಡಿಸಬೇಕು’ ಎಂದು ಬೇಳೂರು ಹೇಳಿದರು.ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ ಶೆಟ್ಟಿ, ಪಿಡಿಒ ಭೋಗರಾಜ್, ಕೆಡಿಪಿ ಸದಸ್ಯ ಸತ್ಯನಾರಾಯಣ ಜಿ ಟಿ, ಮುಖ್ಯ ಶಿಕ್ಷಕಿ ಅಕ್ಷತಾ, ವನಜಾಕ್ಷಿ ಪ್ರಮುಖರಾದ ಅಶೋಕ ಬೇಳೂರು, ವಿಟಿ ಸ್ವಾಮಿ, ಭರತ್ ವಿ ಪಿ, ದೇವರಾಜ್ ಕಪ್ಪದೂರು ಹಾಜರಿದ್ದರು.
