ಶಿವಮೊಗ್ಗ | ನವೆಂಬರ್ 15ರಂದು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆ ; ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ

ಶಿವಮೊಗ್ಗ,ಕರ್ನಾಟಕ ಲೋಕಸೇವಾ ಆಯೋಗವು 2026–27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (Gazetted Probationers) ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಒಟ್ಟು 319 ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 15ರಂದು ರಾಜ್ಯಾದ್ಯಂತ ಪೂರ್ವಭಾವಿ ಪರೀಕ್ಷೆ ನಡೆಸಲಿದೆ. ನಗರದಲ್ಲಿ ಈ ಪರೀಕ್ಷೆಯು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತವು ಇದೇ ಮೊದಲ ಬಾರಿಗೆ ಹಿಂದೆಂದಿಗಿಂತ ಹೆಚ್ಚಿನ ಬಿಗಿಭದ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ. ನಿಟ್ಟಳಿ ಅವರು ಹೇಳಿದರು.

ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಪರೀಕ್ಷೆಯು ನವೆಂಬರ್ 15ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಮೊದಲ ಅಧಿವೇಶನದಲ್ಲಿ ಸಾಮಾನ್ಯ ಅಧ್ಯಯನ ಮತ್ತು ಮಾನವಿಕ ವಿಷಯಗಳು (General Studies and Humanities) ಮತ್ತು ಮಧ್ಯಾಹ್ನ 2ರಿಂದ ಸಂಜೆ 4ಗಂಟೆಯವರೆಗೆ ಎರಡನೇ ಅಧಿವೇಶನದಲ್ಲಿ ರಾಜ್ಯಕ್ಕೆ ಸಂಬಂಧಿಸಿದ ಸಾಮಾನ್ಯ ಅಧ್ಯಯನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಮಾನಸಿಕ ಸಾಮರ್ಥ್ಯ (Mental Ability) ಕುರಿತು ಶಿವಮೊಗ್ಗ ನಗರದ 24ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, 8466ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಉನ್ನತ ಜವಾಬ್ದಾರಿಯ ಹುದ್ದೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡುವ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದ್ದು, ಪರೀಕ್ಷೆಯ ಪಾರದರ್ಶಕತೆ ಮತ್ತು ಭದ್ರತೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಡೆಯುವ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಪಾರದರ್ಶಕವಾಗಿ ನಡೆಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಚುನಾವಣಾ ಕಾರ್ಯದ ಮಾದರಿಯಲ್ಲಿ ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳೂ ಕೂಡ ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು.

ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರನ್ನು ನಿಯೋಜಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿಯೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ದೃಶ್ಯಾವಳಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದಲೇ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ನೇರ ಮೇಲ್ವಿಚಾರಣೆಗೆ ವಿಶೇ಼ಷ ಗಮನಹರಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಸಿಗ್ನಲ್ ಜಾಮರ್‌ಗಳನ್ನು ಅಳವಡಿಸಲಾಗುತ್ತದೆ. ಮೊಬೈಲ್ ಫೋನ್‌ ಸೇರಿದಂತೆ ಯಾವುದೇ ವಿದ್ಯುನ್ಮಾನ ವಾಹಕಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ 24 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಪ್ರತಿ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು.

ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು (Hall Ticket) ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಪ್ರವೇಶ ಪತ್ರದಲ್ಲಿರುವ ಪರೀಕ್ಷಾ ಕೇಂದ್ರ, ವಿಳಾಸ ಮತ್ತು ವರದಿ ಮಾಡುವ ಸಮಯವನ್ನು ಪರಿಶೀಲಿಸಬೇಕು. ಮೂಲ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯದಂತೆ ಹಾಗೂ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದ್ದಾರೆ.

ಈ ಪರೀಕ್ಷೆಯು ರಾಜ್ಯದ ಆಡಳಿತ ವ್ಯವಸ್ಥೆಗೆ ಸಮರ್ಥ, ದಕ್ಷ ಹಾಗೂ ಜನಪರ ಅಧಿಕಾರಿಗಳನ್ನು ಆಯ್ಕೆ ಮಾಡುವ ಪ್ರಮುಖ ಪ್ರಕ್ರಿಯೆಯಾಗಿದ್ದು, ಈ ಹಿಂದಿನ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳು ಮತ್ತು ಗೊಂದಲಗಳ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಬಿಗಿಗೊಳಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನೆಯಲ್ಲಿ ಪರೀಕ್ಷೆಯನ್ನು ಚುನಾವಣಾ ಮಾದರಿಯ ಭದ್ರತೆ ಮತ್ತು ಶಿಸ್ತಿನೊಂದಿಗೆ ನಡೆಸುವಂತೆ ಸೂಚಿಸಿದ್ದಲ್ಲದೆ, ಯಾವುದೇ ಅಕ್ರಮ ಅಥವಾ ಲೋಪಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿರುವುದಾಗಿ ಅವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ಪರೀಕ್ಷಾ ಕೊಠಡಿಗಳು ಪರೀಕ್ಷೆ ನಡೆಸಲು ಸುರಕ್ಷಿತವೇ? ಎಂಬುದನ್ನು ವೀಕ್ಷಕರು ಗಮನಿಸಬೇಕು. ಕೇಂದ್ರಗಳಲ್ಲಿ ಯಾವುದೇ ನ್ಯೂನತೆಗಳಿಲ್ಲದಿರುವಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಕೇಂದ್ರದ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳ ಸಮನ್ವಯತೆಗಾಗಿ ಇಂದೇ ಸಭೆಗಳನ್ನು ನಡೆಸಿ, ಕಾರ್ಯಸೂಚಿ ಸಿದ್ಧಪಡಿಸಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಅವರು ಮಾತನಾಡಿ, ನಿಯೋಜಿತ ಅಧಿಕಾರಿಗಳು ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು. ನಿರೀಕ್ಷಿಸಿದಂತೆ ಯಾವುದೇ ಲೋಪಗಳಿಲ್ಲದಂತೆ ಪರೀಕ್ಷೆ ನಡೆಯಲು ಸಹಕರಿಸುವಂತೆ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸದಂತೆ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ.ನಿಖಿಲ್‌ ಅವರು ಮಾತನಾಡಿ, ಪರೀಕ್ಷೆಗಳು ಸುಗಮವಾಗಿ ನಡೆಸಲು ಹಾಗೂ ಪರೀಕ್ಷಾ ಕರ್ತವ್ಯದಲ್ಲಿ ಯಾವುದೇ ಅಡಚಣೆಗಳುಂಟಾಗದಿರಲು ಅಗತ್ಯ ಪೊಲೀಸ್‌ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. ಕೇಂದ್ರಗಳಲ್ಲಿ ಕುಡಿಯುವ ನೀರು, ಶುದ್ಧ ಗಾಳಿ, ಬೆಳಕು, ಶೌಚಾಲಯ ಇರುವಂತೆ ಹಾಗೂ ಪರೀಕ್ಷಾರ್ಥಿಗಳಿಗೆ ಆಸನ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳಲ್ಲದೇ ಅನ್ಯರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರ ಪ್ರವೇಶಿಸುವ ಪ್ರತಿ ವ್ಯಕ್ತಿಯ ಚಲನವಲನಗಳನ್ನು ವೀಕ್ಷಿಸಲು ವಹಿಯನ್ನು ನಿರ್ವಹಿಸಲು ಹಾಗೂ ಕಣ್ಗಾವಲು ಇರಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ., ಜಿಲ್ಲಾ ಖಜಾನಾಧಿಕಾರಿ ಶ್ರೀಮತಿ ಹೆಚ್.ಎಸ್.ಸಾವಿತ್ರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ, ಉಪನ್ಯಾಸಕ ಐ.ಎಫ್‌.ಕುಟ್ರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Author