ಉಡುಪಿ,ರವಿ ಪೂಜಾರಿ ಅವರ ತಾಯಿ ಸುಶೀಲಾ ದೇವಪ್ಪ ಪೂಜಾರಿ (86) ಅವರು ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ. ಇವರು ಮಲ್ಪೆಯ ವಡಮಂಡೇಶ್ವರ ನಿವಾಸಿಯಾಗಿದ್ದರು.ಮೃತರ ಅಂತ್ಯಕ್ರಿಯೆ ಮಲ್ಪೆಯ ಹಿಂದೂ ರುದ್ರಭೂಮಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ಕಟ್ಟುನಿಟ್ಟಿನ ಭದ್ರತೆಯ ನಡುವೆ ನೆರವೇರಿತು.
ಮೋಸ್ಟ್ ವಾಂಟೆಡ್ ಆರೋಪಿಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿರುವ ರವಿ ಪೂಜಾರಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಕುಟುಂಬದ ಆಪ್ತ ಬಂಧುಗಳಿಗೆ ಮಾತ್ರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.
ಹಿಂದೂ ಬಿಲ್ಲವ ಪೂಜಾರಿ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ರವಿ ಪೂಜಾರಿ ಅವರು ಸ್ವತಃ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ತಾಯಿಗೆ ಅಂತಿಮ ನಮನ ಸಲ್ಲಿಸಿದರು.ಮಲ್ಪೆಯ ಹಿಂದೂ ರುದ್ರಭೂಮಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
