ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಛಾದವರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿಯ ಚಾಲುಕ್ಯ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆಯು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ಬಂಧಿಸುವ ನೆಪದಲ್ಲಿ ಪೊಲೀಸರು ಅತ್ಯಂತ ಅಮಾನವೀಯವಾಗಿ ವರ್ತಿಸಿದ್ದಾರೆ.
ಬಂಧನದ ಸಮಯದಲ್ಲಿ ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ, ದೈಹಿಕವಾಗಿ ಹಲ್ಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದು ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಕೃತ್ಯವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ. ಪೊಲೀಸ್ ಇಲಾಖೆಯು ರಾಜಕೀಯ ಪ್ರೇರಿತವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಸಂಶಯ ನಮಗೆ ಮೂಡಿದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.
ಹುಬ್ಬಳ್ಳಿಯ ಈ ಘಟನೆಯ ಬಗ್ಗೆ ತಟಸ್ಥ ಮತ್ತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ. ಆದರೆ, ಈ ಸುಮೋಟೋ ಪ್ರಕರಣವು ಕೇವಲ ವಿಡಿಯೋ ಮಾಡಿದವರ ವಿರುದ್ಧ ಮಾತ್ರ ಸೀಮಿತವಾಗಬಾರದು. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಇಲಾಖೆಯು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಕಾರ್ಪೊರೇಟರ್ ಅವರ ಒತ್ತಡಕ್ಕೆ ಮಣಿದು ಪೊಲೀಸರು ಈ ಹಲ್ಲೆ ನಡೆಸಿದ್ದಾರೆ ಎಂದು ನಾವು ಬಲವಾಗಿ ನಂಬಿದ್ದೇವೆ. ಇದು ಸಂವಿಧಾನಬದ್ಧವಾಗಿ ಮಹಿಳೆಯರಿಗಿರುವ ರಕ್ಷಣೆಯ ಹಕ್ಕನ್ನು ಉಲ್ಲಂಘಿಸಿದಂತಾಗಿದೆ.ಈ ದೌರ್ಜನ್ಯದಲ್ಲಿ ಭಾಗಿಯಾಗಿರುವ ಮತ್ತು ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜಕೀಯ ಕಾರ್ಯಕರ್ತೆಯರಿಗೆ ಮತ್ತು ಸಾಮಾನ್ಯ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿರುವ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು.
ಒಂದು ವೇಳೆ ಈ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಿಜೆಪಿ ಮಹಿಳಾ ಮೋರ್ಚಾದಿಂದ ತೀವ್ರ ಸ್ವರೂಪದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ವಿವರಿಸಿದ್ದಾರೆ. ನಗರಾಧ್ಯಕ್ಷೆ ರಶ್ಮಿ ಶ್ರೀನಿವಾಸ್ ,ನಗರ ಪ್ರಧಾನ ಕಾರ್ಯದರ್ಶಿ ಯಶೋದಾ ವೈಷ್ಣವ್, ಕಾರ್ಯದರ್ಶಿ ನಿರ್ಮಲಾ ಮೊದಲಾದವರಿದ್ದರು.



