ನವದೆಹಲಿ, ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತೆ ವಿವಸ್ತ್ರಪ್ರಕರಣದಲ್ಲಿ ಪೊಲೀಸರು ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಕೂಡ ಬರೆದಿದೆ.
ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರ ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿ, ವಿವಸ್ತ್ರದ ಆಕ್ಷೇಪಾರ್ಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳಾ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ.
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹಾಟ್ಕರ್ ಅವರು ಈ ಘಟನೆಯ ತೀವ್ರವಾಗಿ ಖಂಡಿಸಿದ್ದಾರೆ. ಇದು ಮಹಿಳೆಯ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿ ತಕ್ಷಣವೇ ಎಫ್‌ಐಆರ್ ದಾಖಲಿಸಿ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಬಳಸಿಕೊಂಡು ನಿಖರ ಹಾಗೂ ಸಮಯಬದ್ಧ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಹಾಗೂ ಮಹಿಳೆಯ ಜತೆಗೆ ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಪತ್ರದಲ್ಲಿ ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ, ಕಾನೂನುಬದ್ಧ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ 5 ದಿನಗಳ ಒಳಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಆಯೋಗವು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.
ಕಾಂಗ್ರೆಸ್ ನಾಯಕಿ ಸೇರಿ 9 ಮಂದಿ ವಿರುದ್ಧ ಪ್ರಕರಣ:ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯೆ ಸುವರ್ಣಾ ಕಲ್ಲಕುಂಟ್ಲ, ಡೇವಿಡ್ ಸೇರಿದಂತೆ ಒಟ್ಟು 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ, ಗಲಭೆ ಸೇರಿ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 109, 115(2), 118(1), 189(2), 191(2), 74, 190 ಹಾಗೂ 351ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.



