ಚಿಕ್ಕಮಗಳೂರು | ಬಾಲಕನ‌ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಅರಣ್ಯ ಇಲಾಖೆ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ಶುಕ್ರವಾರ 11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾಳಿಗೊಳಗಾದ ಬಾಲಕನನ್ನು ಹೃದಯ (11) ಎಂದು ಗುರುತಿಸಲಾಗಿದೆ.

ಮನೆಯ ಸಮೀಪವೇ ನಿಂತಿದ್ದ ಬಾಲಕನ ಮೇಲೆ ಏಕಾಏಕಿ ಚಿರತೆಯು ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಕನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ವಾರದ ಹಿಂದೆ, ಇದೇ ಪ್ರದೇಶದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ ನಡೆಸಿ ಪ್ರಾಣ ತೆಗೆದ ಘಟನೆ ಮಾಸುವ ಮೊದಲೇ ಈ ದಾಳಿ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಮನುಷ್ಯರ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಚಿರತೆಯನ್ನು ಕೂಡಲೇ ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ತೀವ್ರವಾಗಿ ಆಗ್ರಹಿಸಿದ್ದಾರೆ.

Author