ಉಡುಪಿ, ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವವು ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ 2027ರ ಫೆ.18 ರಿಂದ ಫೆ. 28ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಘೋಷಿಸಿದ್ದಾರೆ.
ಈ ಕುರಿತು ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಮಸ್ತಕಾಭಿಷೇಕ ಕೇವಲ ಧಾರ್ಮಿಕ ಕಾರ್ಯಕ್ರಮವಲ್ಲ. ಇದು ನಾಡಿನ ಸಮಸ್ತ ಬಂಧುಗಳು ಜಾತಿ, ಮತ, ಧರ್ಮದ ಬೇಧವಿಲ್ಲದೆ ನಡೆಸುವ ಹಬ್ಬ. ಈ ಮೂಲಕ ನಾವು ಮಾತ್ರ ಬೆಳೆಯುವುದಲ್ಲ, ಸಮಾಜ ಕೂಡ ಬೆಳೆಯಬೇಕು ಎಂದರು.
ಮಹಾಮಸ್ತಕಾಭಿಷೇಕಕ್ಕೆ 305 ದಿನಗಳು ಬಾಕಿ ಇವೆ. ಇದನ್ನು ನಾಡಿನ ಉತ್ಸವವಾಗಿ ಯಶಸ್ವಿಗೊಳಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಅವರು ಮನವಿ ಮಾಡಿದರು.


