ನವದೆಹಲಿ, ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದೆ ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರಿ ಸದ್ದು ಮಾಡಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರು ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಘೋಷಿಸಿದರು.

ಈ ಅಭಿಯಾನದಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿ ತಮ್ಮ ಎಣಿಕೆ ಫಾರ್ಮ್‌ಗಳನ್ನು ಭರ್ತಿ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.ಈ ಪರಿಷ್ಕರಣೆಯ ಉದ್ದೇಶ ಅರ್ಹ ಮತದಾರರ ಹೆಸರುಗಳು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ಮಾಡುವುದು ಮತ್ತು ಅನರ್ಹ ಹೆಸರುಗಳನ್ನು ತೆಗೆದುಹಾಕುವುದು ಎಂದು ಅವರು ತಿಳಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಂತ-3 ಅಭಿಯಾನವು ಹಂತ ಹಂತವಾಗಿ ಸುಮಾರು 36 ಕೋಟಿ ಮತದಾರರನ್ನು ಒಳಗೊಂಡಿರಲಿದೆ. ಪ್ರಸ್ತುತ ನಡೆಯುತ್ತಿರುವ ಜನಗಣತಿಯ ಮನೆ ಪಟ್ಟಿ ಪ್ರಕ್ರಿಯೆಯೊಂದಿಗೆ ಇದನ್ನು ಸಂಯೋಜಿಸಲಾಗಿದ್ದು, ಕ್ಷೇತ್ರ ಸಿಬ್ಬಂದಿಯ ಬಳಕೆಯನ್ನು ಪರಿಣಾಮಕಾರಿಯಾಗಿ ಮಾಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ.

ಆಯೋಗದ ಪ್ರಕಾರ, ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ, ಕೇಂದ್ರಾಡಳಿತ ಪ್ರದೇಶ ಲಡಾಕ್ ಅನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಈ ಹಂತದ ಪರಿಷ್ಕರಣೆ ನಡೆಯಲಿದೆ. ಹಿಮ ಪ್ರದೇಶಗಳಲ್ಲಿ ಹವಾಮಾನ ಪರಿಸ್ಥಿತಿ ಹಾಗೂ ನಡೆಯುತ್ತಿರುವ ಜನಗಣತಿ ಕಾರ್ಯಾಚರಣೆಗಳ ಹಿನ್ನೆಲೆಯಲ್ಲಿ ಆ ಪ್ರದೇಶಗಳ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.
ಈ ಅಭಿಯಾನ ನಡೆಯಲಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜಧಾನಿ ದೆಹಲಿ, ಒಡಿಶಾ, ಮಿಜೋರಾಂ, ಸಿಕ್ಕಿಂ, ಉತ್ತರಾಖಂಡ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಹರ್ಯಾಣ, ಚಂಡೀಗಢ, ತೆಲಂಗಾಣ, ಪಂಜಾಬ್, ಕರ್ನಾಟಕ, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ನಾಗಾಲ್ಯಾಂಡ್, ತ್ರಿಪುರಾ ಹಾಗೂ ದಾದ್ರಾ ಮತ್ತು ನಗರ್ ಹವೇಲಿ, ಡಿಯು ಡಾಮುನ್ ಸೇರಿವೆ ಎನ್ನಲಾಗಿದೆ.

