ಶಿವಮೊಗ್ಗ,”ಕ್ಷೇತ್ರದ ಸಾರ್ವಜನಿಕರ ದೈನಂದಿನ ಕಷ್ಟ-ಸುಖಗಳಿಗೆ ತಕ್ಷಣ ಸ್ಪಂದಿಸಿ, ನೈಸರ್ಗಿಕ ವಿಕೋಪಗಳಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ಆಸರೆಯಾಗುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಜಾಗಕ್ಕೆ ಶಾಸಕರು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಜಂಟಿ ಪರಿಶೀಲನೆ ನಡೆಸಿದ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಮನೆ ಹಾನಿಗೊಳಗಾಗಿ ಆಶ್ರಯ ಕಳೆದುಕೊಂಡಿರುವ ಕುಟುಂಬದ ಅಹವಾಲನ್ನು ಆಪ್ತವಾಗಿ ಆಲಿಸಿದ ಶಾಸಕರು, ಪರಿಸ್ಥಿತಿಯ ಗಾಂಭೀರ್ಯತೆಯನ್ನು ಮನಗಂಡು ಧೈರ್ಯ ತುಂಬಿದರು. ನಂತರ, ಸ್ಥಳದಲ್ಲಿದ್ದ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, “ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಯಾವುದೇ ರೀತಿಯ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ. ತಕ್ಷಣವೇ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ಸಿಗುವಂತೆ ಕ್ರಮ ಕೈಗೊಳ್ಳಬೇಕು” ಎಂದು ಕಟ್ಟುನಿಟ್ಟಾಗಿ ಆದೇಶಿಸಿದರು.

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಗನ್ನಾಥ್, SC ಮೋರ್ಚಾ ನಗರ ಅಧ್ಯಕ್ಷರಾದ ವಿಜಯೇಂದ್ರ, ಕಾರ್ಯದರ್ಶಿಗಳಾದ ರಾಘವೇಂದ್ರ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.


