ನವದೆಹಲಿ, ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಯುವಕರ ಭವಿಷ್ಯದೊಂದಿಗೆ ಯಾರೂ ಆಟವಾಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.
ಮಂಗಳವಾರ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಈ ವಿಷಯ ಪ್ರಸ್ತಾಪಿಸಿದರು.ಈ ಸಭೆ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ‘ಸಂಸತ್ ಚಲೋ’ ಪ್ರತಿಭಟನೆ ನಡೆಸಿದ ಮರುದಿನವೇ ನಡೆಯಿತು.
ಸಭೆಯಲ್ಲಿ ಪ್ರಧಾನಮಂತ್ರಿಗಳು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಭೇದ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ 13 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ಸಂಸದರಿಗೆ ತಿಳಿಸಿದರು ಎಂದು ಹೇಳಿದರು.
