ಶಿವಮೊಗ್ಗ, ವಿನೋಬನಗರ ಠಾಣೆಯಲ್ಲಿ ಪಿಎಸ್ಐ ಆಗಿ ನಿರ್ವಹಿಸುತ್ತಿದ್ದ ಮಂಜುನಾಥ್ (೫೬) ಬುಧವಾರ ನಿಧನರಾಗಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ತಪಾಸಣೆಗಾಗಿ ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದರು.
ತಕ್ಷಣ ಅವರನ್ನು ವಾಪಸ್ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ಕರೆತರಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಪ್ರಾಥಮಿಕ ಮಾಹಿತಿಯಂತೆ ಹೃದಯಾಘಾತವೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.
ಮಂಜುನಾಥ್ ಮೂಲತಃ ತುಮಕೂರು ಜಿಲ್ಲೆಯ ಹಾರನಹಳ್ಳಿ ಗ್ರಾಮದವರಾಗಿದ್ದು, ಹಲವು ವರ್ಷಗಳಿಂದ ಶಿವಮೊಗ್ಗದ ವಿನೋಬನಗರದಲ್ಲಿ ಕುಟುಂಬ ಸಮೇತ ನೆಲೆಸಿದ್ದರು.
೧೯೯೨ರ ಬ್ಯಾಚ್ ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಅವರು, ತಮ್ಮ ಸೇವಾವಧಿಯಲ್ಲಿ ಹೆಡ್ ಕಾನ್ಸ್ಟೇಬಲ್, ಸಹಾಯಕ ಪೊಲೀಸ್ ಉಪನಿರೀಕ್ಷಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಸುಮಾರು ನಾಲ್ಕು ವರ್ಷಗಳ ಹಿಂದೆ ಬಡ್ತಿ ಹೊಂದಿ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಂಜುನಾಥ್ ಅವರು ಕೆಲಕಾಲದಿಂದ ಮೂತ್ರಪಿಂಡ (ಕಿಡ್ನಿ) ಸ೦ಬ೦ಧಿತ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಹಾಗೂ ಬಳಿಕ ಮಣಿ ಪಾಲ ಆಸ್ಪತ್ರೆಯಲ್ಲಿ ಚಿಕಿತ ಮುಂದುವರಿದಿತ್ತು. ಮಂಜುನಾಥ್ಗೆ ಮಕ್ಕಳಿರಲಿಲ್ಲ.
ಕರ್ತವ್ಯನಿಷ್ಠೆ, ಸರಳ ವ್ಯಕ್ತಿತ್ವ ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಹೆಸರು ಗಳಿಸಿದ್ದರು. ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.
