ಶಿವಮೊಗ್ಗ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಶಿವಮೊಗ್ಗ ಮಹಾನಗರ ಘಟಕದ ನೇತೃತ್ವದಲ್ಲಿ ಇಂದು ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ವಿದ್ಯಾರ್ಥಿಗಳ ವಿವಿಧ ಜ್ವಲಂತ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯ ಬಳಿಕ ವಿದ್ಯಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಉದ್ದೇಶಿಸಿದ ಮನವಿಯನ್ನು ಸಲ್ಲಿಸಿದರು. ವಿಶ್ವವಿದ್ಯಾಲಯ ಆಡಳಿತವು ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಎಬಿವಿಪಿ ಪ್ರಮುಖ ಬೇಡಿಕೆಗಳಲ್ಲಿ ಸಹ್ಯಾದ್ರಿ ಕಾಲೇಜಿನಲ್ಲಿ M.Sc ಹಾಗೂ M.A ಸ್ನಾತಕೋತ್ತರ ಪ್ರವೇಶಾತಿಯನ್ನು ಪುನರಾರಂಭಿಸುವುದು, ಪ್ರಸ್ತುತ ಜಾರಿಯಲ್ಲಿರುವ ಡಿಜಿಟಲ್ ಮೌಲ್ಯಮಾಪನ ಪದ್ಧತಿಯನ್ನು ರದ್ದುಪಡಿಸುವುದು, ವಿದ್ಯಾರ್ಥಿಗಳಿಂದ ಸಂಗ್ರಹವಾಗುವ ಕ್ರೀಡಾ ಶುಲ್ಕವನ್ನು ಪಾರದರ್ಶಕವಾಗಿ ಕ್ರೀಡಾ ಅಭಿವೃದ್ಧಿಗೆ ಬಳಸುವುದು, ಘಟಿಕೋತ್ಸವವನ್ನು ತಕ್ಷಣ ನಡೆಸಿ ಪದವಿ ಪ್ರಮಾಣಪತ್ರಗಳನ್ನು ವಿತರಿಸುವುದು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವುದು ಸೇರಿವೆ.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಹಾನಗರ ಕಾರ್ಯದರ್ಶಿ ನಿರಂಜನ್ ಹೆಚ್.ಎಸ್., ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಿಶ್ವವಿದ್ಯಾಲಯವು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ನಿರಂತರವಾಗಿ ನಿರ್ಲಕ್ಷಿಸಿದರೆ ಎಬಿವಿಪಿ ರಾಜ್ಯವ್ಯಾಪಿ ಹಾಗೂ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ, ವಿದ್ಯಾರ್ಥಿ ಪರ ಘೋಷಣೆಗಳನ್ನು ಕೂಗಿ ವಿಶ್ವವಿದ್ಯಾಲಯದ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸುವಂತೆ ಒತ್ತಾಯಿಸಿದರು.
