ನವದೆಹಲಿ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪಾಸ್ ಆಗಿದ್ದ ಸಾರ್ವಜನಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ರಾಷ್ಟ್ರಪತಿಗಳು ಶನಿವಾರ ಅಂಕಿತ ಹಾಕಿದ್ದಾರೆ.
ಈ ವಾರದ ಆರಂಭದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆ ಮಂಡಿಸಲಾಗಿದ್ದ ‘ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ಮಾರ್ಗಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ಕ್ಕೆ ಧ್ವನಿಮತದ ಮೂಲಕ ಅಂಗೀಕಾರವಾಯಿತು. ಬಳಿಕ ಇದನ್ನು ರಾಷ್ಟ್ರಪತಿ ಅವರಿಗೆ ಕಳುಹಿಸಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಮಸೂದೆಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ವಿಚಾರಣೆಯನ್ನು ತ್ವರಿತಗತಿಗೊಳಿಸಲು ಫಾಸ್ಟ್ ಟ್ರಾಕ್ ಕೋರ್ಟ್ ಸ್ಥಾಪನೆ ಮತ್ತು ತನಿಖೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವ ಜೊತೆಗೆ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಪ್ರಸ್ತಾಪ ಹೊಂದಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳು ಈಗ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡವನ್ನು ತೆರಬೇಕಾಗುತ್ತದೆ. ಇನ್ನು ಅಂತಹ ಅಪರಾಧಗಳಲ್ಲಿ ಭಾಗಿಯಾಗಿರುವ ಸಂಘಟಿತ ಅಪರಾಧ ಸಿಂಡಿಕೇಟ್‌ಗಳಿಗೆ ಏಳರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ಗಳಿಂದ ಪ್ರಾರಂಭವಾಗುವ ದಂಡ ವಿಧಿಸಬಹುದು.
