ಬೆಂಗಳೂರು, ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ನಿಯಮಗಳ ಅಡಿಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದಾದ್ಯಂತ ವಿಶೇಷ ತನಿಖೆ ಮತ್ತು ದಾಳಿ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ. ಮತ್ತು ನಿಷೇಧಿತ ಉತ್ಪನ್ನಗಳ ಮಾರಾಟದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.ಈ ಕುರಿತು ಆಗಸ್ಟ್ 10ರಂದು ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿದ್ದು, ಈ ನಿಷೇಧವು ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ಜಾರಿಯಲ್ಲಿರಲಿದೆ.
ಈ ಅವಧಿಯಲ್ಲಿ ಯಾವುದೇ ಪ್ರದೇಶದಲ್ಲಿ ನಿಷೇಧಿತ ತಂಬಾಕು ಅಥವಾ ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ ಅಥವಾ ಮಾರಾಟ ಕಂಡುಬಂದಲ್ಲಿ, ಸಾರ್ವಜನಿಕರು ತಕ್ಷಣವೇ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿನಂತಿಸಿದೆ.
ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸರ್ಕಾರದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಮನವಿ ಮಾಡಿದ್ದಾರೆ.





