ಶಿವಮೊಗ್ಗ | ಹೊಳೆ ಹೊನ್ನೂರು ವ್ಯಾಪ್ತಿಯಲ್ಲಿ ರೀಲ್ಸ್‌ಗಾಗಿ ಅಸಹಾಯಕ ಬಡ ವೃದ್ದೆಗೆ ಕಿರುಕುಳ : ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಕ್ರೈಂ

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಹೋಬಳಿಯ ಅರಸನಗಟ್ಟ ಗ್ರಾಮದಲ್ಲಿ ರೀಲ್ಸ್‌ ಮಾಡುವ ಉದ್ದೇಶದಿಂದ ಮಾನಸಿಕ ಅಸ್ವಸ್ಥ ವ್ಯಕ್ತಿ ಹಾಗೂ ಬಡ ವೃದ್ಧೆಯೊಬ್ಬರಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಬೇಸರ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಯುವಕ ರೀಲ್ಸ್‌ಗಾಗಿ ಅಸಹಾಯಕ ಬಡ ವೃದ್ದೆಯನ್ನು ಗುರಿಯಾಗಿಸಿಕೊಂಡು 5001 ರೂ ಗಣಪತಿ ಹಬ್ಬದ ಆಚರಣೆಗಾಗಿ ನೀಡಬೇಕು ಎಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪವಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ವೀಕ್ಷಣೆ ಹಾಗೂ ಪ್ರಚಾರ ಪಡೆಯುವ ಉದ್ದೇಶದಿಂದ ಅಸಹಾಯಕರು ಮತ್ತು ವೃದ್ಧರನ್ನು ಬಳಸಿಕೊಳ್ಳುವುದು ಅತ್ಯಂತ ಅಮಾನವೀಯ ಕೃತ್ಯ ಎಂದು ನಾಗರೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ವಿಡಿಯೋಗಳು ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿ, ಘಟನೆಗೆ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆಗ್ರಹಿಸಿದ್ದಾರೆ.

ಅಲ್ಲದೆ, ಸಂತ್ರಸ್ತ ವೃದ್ಧೆ ಹಾಗೂ ಮಾನಸಿಕ ಅಸ್ವಸ್ಥ ವ್ಯಕ್ತಿಯ ಗೌರವ ಮತ್ತು ಸುರಕ್ಷತೆಯನ್ನು ಖಾತರಿಪಡಿಸುವಂತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಈ ಪ್ರಕರಣದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Author